ತುಮಕೂರು: ತಾಲ್ಲೂಕಿನ ಜಿಗಿಣಿಪಾಳ್ಯ ಸಮೀಪ ರಾಜ್ಯ ಹೆದ್ದಾರಿ 33ರಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವೇಗವಾಗಿ ಸಂಚರಿಸುತ್ತಿದ್ದ ಕಾರಿಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ತುಮಕೂರು ಕಡೆಯಿಂದ ಪ್ರಯಾಣಿಸುತ್ತಿದ್ದ ಕಾರು ಜಿಗಿಣಿಪಾಳ್ಯ ಬಳಿ ತಲುಪುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಲಾರಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಸಿಲುಕಿಕೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಚೂರಾಗಿದ್ದು, ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಮಢ್ಯದ ಗಾಯತ್ರಿ (63) ಹಾಗೂ ಅವರ ಪತಿ ಕುಮಾರ ನರಸಿಂಹ ಸ್ವಾಮಿ (65) ಎಂದು ಗುರುತಿಸಲಾಗಿದೆ. ಇನ್ನೂ ಘಟನೆಯಲ್ಲಿ ಮೃತಪಟ್ಟ ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.
ಅಪಘಾತದ ನಂತರ ಕೆಲಕಾಲ ರಾಜ್ಯ ಹೆದ್ದಾರಿ 33ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳ ಸಂಚಾರದಲ್ಲಿ ತೊಂದರೆ ಉಂಟಾಯಿತು. ಬಳಿಕ ಪೊಲೀಸರು ಸಂಚಾರವನ್ನು ನಿಯಂತ್ರಿಸಿ ವಾಹನ ಸಂಚಾರ ಸುಗಮಗೊಳಿಸಿದರು.
ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
