ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ನೂತನ ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ನಡೆದ ರಾಜಕೀಯ ಚಟುವಟಿಕೆಗಳಿಗೆ ಇದೀಗ ಅಂತಿಮ ರೂಪ ಸಿಕ್ಕಿದ್ದು, ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ.
ಇಂದು ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಪಕ್ಷದ ಎಲ್ಲ ಶಾಸಕರು ಹಾಗೂ ಹಿರಿಯ ನಾಯಕರು ಡಿಕೆಶಿ ಅವರ ಹೆಸರನ್ನು ಬೆಂಬಲಿಸಿದ್ದು, ಯಾವುದೇ ವಿರೋಧವಿಲ್ಲದೆ ಅವರನ್ನು ನಾಯಕನಾಗಿ ಘೋಷಿಸಲಾಯಿತು. ಸಭೆಯ ಬಳಿಕ ಕಾಂಗ್ರೆಸ್ ನಾಯಕರು ಸರ್ಕಾರ ರಚನೆ ಪ್ರಕ್ರಿಯೆಯನ್ನು ತ್ವರಿತಗೊಳಿಸಿದರು.
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಚಿವ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ, ಕೆ.ಎಚ್. ಮುನಿಯಪ್ಪ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದು, ಡಿಕೆಶಿ ಅವರಿಗೆ ಬೆಂಬಲ ಸೂಚಿಸಿದರು.
ರಾಜ್ಯಪಾಲರೊಂದಿಗೆ ನಡೆದ ಭೇಟಿಯ ಸಂದರ್ಭದಲ್ಲಿ ಸರ್ಕಾರ ರಚನೆಗೆ ಅಗತ್ಯವಾದ ಸಂಖ್ಯಾಬಲ ತಮ್ಮ ಪಕ್ಷದ ಬಳಿ ಇರುವುದಾಗಿ ಕಾಂಗ್ರೆಸ್ ನಾಯಕರು ವಿವರಿಸಿದರು. ಬಳಿಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದರು. ಇದರೊಂದಿಗೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಂತಾಗಿವೆ.
ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ. ಆರಂಭದಲ್ಲಿ ವಿಧಾನಸೌಧದ ಪೂರ್ವದ್ವಾರದ ಮುಂಭಾಗದ ಭವ್ಯ ಮೆಟ್ಟಿಲುಗಳ ಮುಂದೆ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸಮಾರಂಭ ನಡೆಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಸಂಚಾರ ದಟ್ಟಣೆ ಹಾಗೂ ಭದ್ರತಾ ಕಾರಣಗಳನ್ನು ಪರಿಗಣಿಸಿ ಕೊನೆಗೆ ಲೋಕಭವನವನ್ನು ಆಯ್ಕೆ ಮಾಡಲಾಗಿದೆ.
ಬುಧವಾರ ಸಂಜೆ 5.15ಕ್ಕೆ ಗೋಧೂಳಿ ಶುಭಲಗ್ನದಲ್ಲಿ ಲೋಕಭವನದ ಗಾಜಿನ ಮನೆಯಲ್ಲಿ ಸರಳ ಹಾಗೂ ಸಾಂಪ್ರದಾಯಿಕ ರೀತಿಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು, ಸಚಿವರು, ಶಾಸಕರು, ವಿವಿಧ ಗಣ್ಯರು ಹಾಗೂ ಆಹ್ವಾನಿತ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ಹಾಗೂ ಸರ್ಕಾರದ ಆಡಳಿತಾತ್ಮಕ ಆದ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

