}

ಕರ್ನಾಟಕದಲ್ಲಿ ಮತ್ತೆ ಉಪಚುನಾವಣೆ ಕಾವು: ಧಾರವಾಡ, ಹಿರಿಯೂರು ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಫಿಕ್ಸ್? ಕಾಂಗ್ರೆಸ್-ಬಿಜೆಪಿ ಟಿಕೆಟ್ ಫೈಟ್ ಶುರು

suddilive.com
By -
0

 

karnataka-dharwad-hiriyur-assembly-by-election-congress-bjp-ticket-fight

ರಾಜ್ಯ ರಾಜಕಾರಣದಲ್ಲಿ ಮತ್ತೆ ಉಪಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರದಲ್ಲೇ ಬೈ ಎಲೆಕ್ಷನ್ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ತಿಂಗಳು ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದ ಬೆನ್ನಲ್ಲೇ ಇದೀಗ ಧಾರವಾಡ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರಗಳ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿವೆ. ಅಧಿಕೃತ ದಿನಾಂಕ ಘೋಷಣೆಯಾಗುವ ಮುನ್ನವೇ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಚಟುವಟಿಕೆ ಆರಂಭಿಸಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಒಳರಾಜಕೀಯ ಕಾವು ಪಡೆದುಕೊಂಡಿದೆ.


ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿತ್ತು. ಅದೇ ರೀತಿ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕಾಂಗ್ರೆಸ್ ತನ್ನ ಬಲ ಪ್ರದರ್ಶಿಸಿತ್ತು. ಇದೀಗ ಮತ್ತೆ ಎರಡು ಕ್ಷೇತ್ರಗಳು ಖಾಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದ ಕೇಂದ್ರಬಿಂದು ಧಾರವಾಡ ಮತ್ತು ಹಿರಿಯೂರು ಕ್ಷೇತ್ರಗಳತ್ತ ಸರಿದಿದೆ.


ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಾಲಿನ ಭದ್ರ ಕ್ಷೇತ್ರವೆಂದು ಪರಿಗಣಿಸಲಾಗುತ್ತಿತ್ತು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಬಂದಿದ್ದ ಡಿ. ಸುಧಾಕರ್ ಅವರು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇ 11ರಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದು, ಕ್ಷೇತ್ರದಲ್ಲಿ ರಾಜಕೀಯ ಶೂನ್ಯತೆ ಉಂಟಾಗಿದೆ. ಇದರಿಂದ ಹಿರಿಯೂರು ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.


ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ. ಸುಧಾಕರ್ ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಸಾಧ್ಯತೆ ಕುರಿತು ಚರ್ಚೆಗಳು ನಡೆಯುತ್ತಿದ್ದು, ಸ್ಥಳೀಯ ನಾಯಕರೂ ಟಿಕೆಟ್‌ಗಾಗಿ ಲಾಬಿ ಆರಂಭಿಸಿದ್ದಾರೆ. ಸಚಿವರ ನಿಧನದಿಂದ ಕ್ಷೇತ್ರದಲ್ಲಿ ಸಹಾನುಭೂತಿ ಅಲೆ ನಿರ್ಮಾಣವಾಗುವ ಸಾಧ್ಯತೆ ಇದ್ದು, ಅದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎನ್ನಲಾಗುತ್ತಿದೆ.


ಇನ್ನೊಂದೆಡೆ ಧಾರವಾಡ ವಿಧಾನಸಭಾ ಕ್ಷೇತ್ರದ ರಾಜಕೀಯ ಪರಿಸ್ಥಿತಿ ಇನ್ನಷ್ಟು ಕುತೂಹಲ ಹುಟ್ಟಿಸಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆ ಅವರು ಶಾಸಕ ಸ್ಥಾನ ಕಳೆದುಕೊಂಡಿದ್ದಾರೆ. ಇದರಿಂದ ಧಾರವಾಡ ಕ್ಷೇತ್ರ ತೆರವಾಗಿದ್ದು, ಉಪಚುನಾವಣೆಯ ಸದ್ದು ಈಗಾಗಲೇ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.


ವಿನಯ್ ಕುಲಕರ್ಣಿ ಶಿಕ್ಷೆಗೆ ಗುರಿಯಾದ ಬಳಿಕ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ತಮ್ಮ ರಾಜಕೀಯ ಲೆಕ್ಕಾಚಾರ ಆರಂಭಿಸಿವೆ. ಕಾಂಗ್ರೆಸ್ ವಲಯದಲ್ಲಿ ಇನ್ನೂ ಅಂತಿಮ ನಿರ್ಧಾರವಾಗದಿದ್ದರೂ, ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಸಿಗುವ ನಿರೀಕ್ಷೆಯಲ್ಲಿ ಪಕ್ಷದ ನಾಯಕರು ಕಾಯುತ್ತಿದ್ದಾರೆ ಎನ್ನಲಾಗಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಶಾಸಕ ಜನಾರ್ಧನ ರೆಡ್ಡಿ ಪ್ರಕರಣಗಳ ಮಾದರಿಯಲ್ಲಿ ವಿನಯ್ ಕುಲಕರ್ಣಿಗೂ ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್ ಸಿಗಬಹುದು ಎಂಬ ಆಶಾಭಾವನೆ ಕಾಂಗ್ರೆಸ್ ನಾಯಕರಲ್ಲಿದೆ.


ಆದರೆ, ಉಪಚುನಾವಣೆ ಅನಿವಾರ್ಯವಾದರೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯದ ಮಾಹಿತಿ ಪ್ರಕಾರ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಕೆಲ ನಾಯಕರು ಒಲವು ತೋರಿದ್ದಾರೆ. ಸಹಾನುಭೂತಿ ಮತಗಳ ಲೆಕ್ಕಾಚಾರವೂ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಮತ್ತೊಂದೆಡೆ ವಿನಯ್ ಕುಟುಂಬಕ್ಕೆ ಮತ್ತೆ ಟಿಕೆಟ್ ನೀಡಬಾರದು ಎಂಬ ಅಭಿಪ್ರಾಯವೂ ಪಕ್ಷದ ಕೆಲ ವಲಯಗಳಲ್ಲಿ ಕೇಳಿಬರುತ್ತಿದೆ. ತವನಪ್ಪ ಅಷ್ಟಗಿ ಅವರ ಹೆಸರು ಕೂಡ ಕೇಳಿಬರುತ್ತಿದೆಯಾದರೂ, ಅವರು ಇತ್ತೀಚೆಗೆ ಮಾತ್ರ ಪಕ್ಷ ಸೇರಿರುವ ಹಿನ್ನೆಲೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.


ಬಿಜೆಪಿ ಮಾತ್ರ ಧಾರವಾಡ ಉಪಚುನಾವಣೆ ಪಕ್ಕಾ ಎಂಬ ಲೆಕ್ಕಾಚಾರದಲ್ಲಿಯೇ ರಾಜಕೀಯ ಚಟುವಟಿಕೆ ಆರಂಭಿಸಿದೆ. ಈಗಾಗಲೇ ಬೂತ್ ಮಟ್ಟದ ಸಭೆಗಳು, ಕಾರ್ಯಕರ್ತರ ಅಭ್ಯಾಸ ವರ್ಗಗಳು ಹಾಗೂ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆಗಳು ನಡೆದಿವೆ. ಉಪಚುನಾವಣೆಗೆ ಯಾರು ಅಭ್ಯರ್ಥಿಯಾಗಬಹುದು ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿಯೂ ಜೋರಾಗಿದೆ.


ಮಾಜಿ ಶಾಸಕ ಅಮೃತ ದೇಸಾಯಿ ಅವರಿಗೆ ಮತ್ತೊಮ್ಮೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದ್ದರೂ, ಟಿಕೆಟ್‌ಗಾಗಿ ಹಲವು ನಾಯಕರು ಪೈಪೋಟಿ ನಡೆಸುತ್ತಿದ್ದಾರೆ. ಸಾಮಾಜಿಕ ಹೋರಾಟಗಾರ ಮಂಜುನಾಥ ಮಕ್ಕಳಗೇರಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಾಜಿ ಮಹಾಪೌರ ಈರೇಶ ಅಂಚಟಗೇರಿ ಸೇರಿದಂತೆ ಹಲವು ಹೆಸರುಗಳು ಕೇಳಿಬರುತ್ತಿವೆ. ಜೊತೆಗೆ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾನೂನು ಹೋರಾಟ ನಡೆಸಿದ್ದ ಬಸವರಾಜ ಕೊರವರ ಅವರಿಗೆ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯವೂ ಬಿಜೆಪಿ ವಲಯದಲ್ಲಿ ವ್ಯಕ್ತವಾಗುತ್ತಿದೆ. ಸವಿತಾ ಅಮರಶೆಟ್ಟಿಗೆ ಅವಕಾಶ ನೀಡುವ ಮಾತುಗಳೂ ಕೇಳಿಬರುತ್ತಿವೆ.


ಒಟ್ಟಿನಲ್ಲಿ ಕಾಂಗ್ರೆಸ್ ಹಿಡಿತದಲ್ಲಿದ್ದ ಎರಡು ಕ್ಷೇತ್ರಗಳು ಈಗ ಉಪಚುನಾವಣೆಯ ಅಖಾಡವಾಗುತ್ತಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳು ಪ್ರತಿಷ್ಠೆಯ ಹೋರಾಟಕ್ಕೆ ಸಜ್ಜಾಗಿವೆ. ಸಹಾನುಭೂತಿ ಅಲೆ, ಸ್ಥಳೀಯ ಸಮೀಕರಣಗಳು, ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷಗಳ ಒಳರಾಜಕೀಯ ಈ ಎಲ್ಲಾ ಅಂಶಗಳು ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಉಪಚುನಾವಣೆಯ ದಿನಾಂಕ ಘೋಷಣೆಯಾಗುವ ಮುನ್ನವೇ ರಾಜಕೀಯ ವಾತಾವರಣ ಕಾವೇರಿದ್ದು, ಮುಂದಿನ ದಿನಗಳಲ್ಲಿ ಈ ಎರಡು ಕ್ಷೇತ್ರಗಳು ರಾಜ್ಯ ರಾಜಕೀಯದ ಕೇಂದ್ರಬಿಂದು ಆಗುವ ಸಾಧ್ಯತೆ ಹೆಚ್ಚಾಗಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default