ಮಂಗಳೂರು: ನಗರದ ಟೌನ್‌ಹಾಲ್‌ನಲ್ಲಿ ಶನಿವಾರ ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ‘ಕರ್ನಾಟಕ ಮುಸ್ಲಿಮ್ ಸಮಾವೇಶ’ದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಪ್ರಶ್ನೆಗಳು ಮತ್ತು ಆಗ್ರಹಗಳು ಕೇಳಿಬಂದವು. ‘ಕಾಂಗ್ರೆಸ್ ಸರಕಾರ ಹೇಳಿದ್ದೇನು? ಮಾಡಿದ್ದೇನು? ಮುಂದೇನು?’ ಎಂಬ ಶೀರ್ಷಿಕೆಯ ವರದಿ ಹಾಗೂ ಬೇಡಿಕೆಗಳ ಪಟ್ಟಿಯನ್ನು ಸಮಾವೇಶದಲ್ಲಿ ಬಿಡುಗಡೆ ಮಾಡಲಾಯಿತು. ಸಮಾವೇಶದಲ್ಲಿ ಮಾತನಾಡಿದ ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಮುಖಂಡ ಮುಹಮ್ಮದ್ ಯಾಸೀನ್ ಮಲ್ಪೆ, ಅಲ್ಪಸಂಖ್ಯಾತರ ಹಕ್ಕುಗಳು, ಮೀಸಲಾತಿ, ಶಿಕ್ಷಣ, ವಕ್ಫ್ ಆಸ್ತಿಗಳು ಹಾಗೂ ರಾಜಕೀಯ ಪ್ರಾತಿನಿಧ್ಯದ ಕುರಿತು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಹಿಜಾಬ್ ವಿಚಾರ ಪ್ರಸ್ತಾಪಿಸಿದ ಯಾಸೀನ್ ಮಲ್ಪೆ, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿರ್ಬಂಧವನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ಆದರೆ, ಸಮಾವೇಶದ ದಿನಾಂಕ ಘೋಷಿಸುವವರೆಗೆ ಆ ಆದೇಶ ಮುಂದುವರಿದಿತ್ತು ಎಂದು ಹೇಳಿದರು. ಇದೀಗ ನಿರ್ಬಂಧ ಹಿಂಪಡೆಯಲಾಗಿರುವುದಕ್ಕೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರೂ, ಈ ನಿರ್ಧಾರ ತಡವಾಗಿ ಕೈಗೊಳ್ಳಲಾಗಿದೆ ಎಂದು ಪರೋಕ್ಷವಾಗಿ ಟೀಕಿಸಿದರು.
ಮುಸ್ಲಿಮರ ಮೀಸಲಾತಿ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, 2023ರಲ್ಲಿ ಬಿಜೆಪಿ ಸರ್ಕಾರ ರದ್ದುಪಡಿಸಿದ್ದ ಪ್ರವರ್ಗ 2ಬಿ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಇನ್ನೂ ಮರುಸ್ಥಾಪಿಸಿಲ್ಲ ಎಂದು ಹೇಳಿದರು. ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಅದನ್ನು ಶಾಸನಾತ್ಮಕವಾಗಿ ಜಾರಿಗೆ ತರಲು ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೂಡಲೇ 2ಬಿ ಮೀಸಲಾತಿಯನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಮತಾಂತರ ನಿಷೇಧ ಕಾಯ್ದೆ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನು ರದ್ದುಪಡಿಸುವ ತೀರ್ಮಾನ ಸಚಿವ ಸಂಪುಟದಲ್ಲಿ ಆಗಿದ್ದರೂ, ಅದನ್ನು ಹಿಂಪಡೆಯುವ ಮಸೂದೆ ಇನ್ನೂ ವಿಧಾನಸಭೆಯಲ್ಲಿ ಮಂಡನೆಯಾಗಿಲ್ಲ ಎಂದು ಹೇಳಿದರು. ಈ ಕಾಯ್ದೆ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಲು ಬಳಸಲಾಗುತ್ತಿದೆ ಹಾಗೂ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಗೋಹತ್ಯೆ ನಿಷೇಧ ಕಾಯ್ದೆ ಕುರಿತು ಕಿಡಿಕಾರಿದ ಯಾಸೀನ್ ಮಲ್ಪೆ, ಕರ್ನಾಟಕ ಜಾನುವಾರು ವಧೆ ತಡೆ ಮತ್ತು ಸಂರಕ್ಷಣಾ ಕಾಯ್ದೆ-2020 ರೈತರು, ಕಾರ್ಮಿಕರು, ಮಾಂಸದ ವ್ಯಾಪಾರಿಗಳು ಮತ್ತು ಜಾನುವಾರು ಸಾಗಾಟಗಾರರ ಬದುಕಿನ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಹೇಳಿದರು. ಈ ಕಾನೂನು ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಜಾರಿಗೆ ತರಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ಕೂಡಲೇ ಕಾಯ್ದೆಯನ್ನು ರದ್ದುಪಡಿಸಬೇಕು ಅಥವಾ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.
ಅಲ್ಪಸಂಖ್ಯಾತರ ಬಜೆಟ್ ವಿಚಾರದಲ್ಲಿ ಸರ್ಕಾರ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಅವರು ದೂರಿದರು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವರ್ಷಕ್ಕೆ 10 ಸಾವಿರ ಕೋಟಿ ರೂ. ಮೀಸಲಿಡುವುದಾಗಿ ಹೇಳಲಾಗಿತ್ತು. ಆದರೆ, 2026-27ರ ಬಜೆಟ್‌ನಲ್ಲಿ ಕೇವಲ 4762 ಕೋಟಿ ರೂ. ಮಾತ್ರ ಮೀಸಲಿಡಲಾಗಿದೆ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಘೋಷಿಸಿದ್ದ ಸಂಪೂರ್ಣ ಅನುದಾನವನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ವಕ್ಫ್ ಆಸ್ತಿಗಳ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಅಕ್ರಮ ಅತಿಕ್ರಮಣ, ಅಕ್ರಮ ವರ್ಗಾವಣೆ ಹಾಗೂ ಕಡಿಮೆ ಮೌಲ್ಯದ ಲೀಸ್‌ಗಳ ಸಮಸ್ಯೆ ಮುಂದುವರಿದಿದೆ ಎಂದು ಹೇಳಿದರು. ವಕ್ಫ್ ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿಗೆ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ದೂರಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025ಕ್ಕೆ ರಾಜ್ಯ ಸರ್ಕಾರ ಸ್ಪಷ್ಟ ವಿರೋಧ ವ್ಯಕ್ತಪಡಿಸದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಜಾತಿ ಸಮೀಕ್ಷೆ ವಿಷಯದಲ್ಲೂ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಯಾಸೀನ್ ಮಲ್ಪೆ, ಕಾಂತರಾಜ್ ಆಯೋಗ ಹಾಗೂ ಮಧುಸೂದನ್ ನಾಯಕ್ ಆಯೋಗದ ವರದಿಗಳು ಇನ್ನೂ ಸದನದಲ್ಲಿ ಮಂಡನೆಯಾಗಿಲ್ಲ ಎಂದು ಹೇಳಿದರು. ಇದರ ಪರಿಣಾಮವಾಗಿ ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಮೀಸಲಾತಿ ಹಾಗೂ ಕಲ್ಯಾಣ ಕ್ರಮಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿದರು.
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷ ಭಾಷಣ, ಗುಂಪು ಹಿಂಸಾಚಾರ ಮತ್ತು ಆರ್ಥಿಕ ಬಹಿಷ್ಕಾರದ ಘಟನೆಗಳು ಹೆಚ್ಚುತ್ತಿವೆ ಎಂದು ಹೇಳಿದರು. ತಪ್ಪಿತಸ್ಥರ ವಿರುದ್ಧ ಪರಿಣಾಮಕಾರಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಪ್ರಾತಿನಿಧ್ಯದ ವಿಷಯದಲ್ಲಿ ಮುಸ್ಲಿಮರಿಗೆ ಸಮರ್ಪಕ ಅವಕಾಶ ದೊರೆಯುತ್ತಿಲ್ಲ ಎಂದು ಅವರು ಆರೋಪಿಸಿದರು. ರಾಜ್ಯದಲ್ಲಿ ಮುಸ್ಲಿಮರ ಜನಸಂಖ್ಯೆ ಸುಮಾರು ಶೇ.13ರಷ್ಟಿದ್ದರೂ, ಕಾಂಗ್ರೆಸ್‌ನ 136 ಶಾಸಕರ ಪೈಕಿ ಮುಸ್ಲಿಮರ ಸಂಖ್ಯೆ ಕೇವಲ ಒಂಬತ್ತು ಮಾತ್ರ ಎಂದು ಹೇಳಿದರು. ವಿಧಾನಪರಿಷತ್, ನಿಗಮ-ಮಂಡಳಿ, ವಿಶ್ವವಿದ್ಯಾಲಯ, ಆಯೋಗ ಹಾಗೂ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶನಗಳಲ್ಲಿ ಮುಸ್ಲಿಮರಿಗೆ ಜನಸಂಖ್ಯೆಗೆ ಅನುಗುಣವಾದ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಕೆಲವು ಉತ್ತಮ ಕ್ರಮಗಳನ್ನು ಕೈಗೊಂಡಿದೆ ಎಂದು ಒಪ್ಪಿಕೊಂಡ ಯಾಸೀನ್ ಮಲ್ಪೆ, ಸಿಬ್ಬಂದಿ ನೇಮಕಾತಿ, ವಿದ್ಯಾರ್ಥಿವೇತನ ವಿತರಣೆ, ವಸತಿನಿಲಯಗಳ ಸಾಮರ್ಥ್ಯ ಹಾಗೂ ಪಠ್ಯಕ್ರಮದ ಅಭಿವೃದ್ಧಿ ವಿಷಯಗಳಲ್ಲಿ ಇನ್ನೂ ಸಾಕಷ್ಟು ಕೆಲಸ ಆಗಬೇಕಿದೆ ಎಂದು ಹೇಳಿದರು. ಹಲವು ಕಡೆ ಮೌಲಾನಾ ಆಝಾದ್ ಶಾಲೆಗಳ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಗಮನ ಸೆಳೆದರು.
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮಾತನಾಡಿದ ಅವರು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಪ್ರಕ್ರಿಯೆ ಅಲ್ಪಸಂಖ್ಯಾತರ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಎಸ್‌ಐಆರ್ ಜಾರಿಯಾಗದಂತೆ ತಡೆಯಲು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಬೇಕು ಹಾಗೂ ಯಾವುದೇ ಮತದಾರ ತನ್ನ ಮತದಾನದ ಹಕ್ಕಿನಿಂದ ವಂಚಿತನಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸಮಾವೇಶದ ಕುರಿತು ಮಾತನಾಡಿದ ಯಾಸೀನ್ ಮಲ್ಪೆ, “ಇದು ಗೆದ್ದವರನ್ನು ಗೆಲ್ಲಿಸಿದವರು ಪ್ರಶ್ನಿಸುವ ಅತ್ಯಂತ ಪ್ರಜಾತಾಂತ್ರಿಕ ಸಮಾವೇಶವಾಗಿದೆ. ಈ ಸಮಾವೇಶದ ಹಿಂದೆ ಯಾರಿದ್ದಾರೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ಆದರೆ, ಈ ಸಮಾವೇಶದ ಹಿಂದೆ ಯಾರೂ ಇಲ್ಲ. ಎಲ್ಲರೂ ಧೈರ್ಯದಿಂದ ಮುಂದೆ ನಿಂತು ಇದನ್ನು ನಡೆಸುತ್ತಿದ್ದಾರೆ” ಎಂದು ಹೇಳಿದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

