}

ಎಸ್‌ಐಆರ್-2026 ಪರಿಷ್ಕರಣೆ ವೇಳೆ ನಿರ್ಲಕ್ಷ್ಯ ಮಾಡಿದರೆ ಬಿಎಲ್‌ಒ ವಿರುದ್ಧ ಎಫ್‌ಐಆರ್ | ಕರ್ನಾಟಕ ಚುನಾವಣಾ ಆಯೋಗ ಎಚ್ಚರಿಕೆ

suddilive.com
By -
0

 


ಬೆಂಗಳೂರು: ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಪ್ರಕ್ರಿಯೆ ವೇಳೆ ಉದ್ದೇಶಪೂರ್ವಕವಾಗಿ ಮತದಾರರ ಮಾಹಿತಿಯನ್ನು ನಿರ್ಲಕ್ಷ್ಯ ಮಾಡುವುದು ಅಥವಾ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವಂತಹ ಘಟನೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ವಿರುದ್ಧ ಕಾನೂನು ಕ್ರಮ ಕೈಗೊಂಡು ಎಫ್‌ಐಆರ್ ದಾಖಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.


ಬುಧವಾರ ಬೆಂಗಳೂರಿನ ವಾರ್ತಾ ಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ರಾಜ್ಯ ಚುನಾವಣಾ ಆಯೋಗ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಅರ್ಹ ನಾಗರಿಕ ಮತದಾರರ ಪಟ್ಟಿಯಿಂದ ವಂಚಿತರಾಗಬಾರದು ಎಂಬುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು. ಅದೇ ವೇಳೆ ಅನರ್ಹ ಮತದಾರರು ಪಟ್ಟಿಯಲ್ಲಿ ಉಳಿಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಲೋಪದೋಷ ರಹಿತ ಮತ್ತು ವಿಶ್ವಾಸಾರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ “ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026”ರ ಮುಖ್ಯ ಗುರಿಯಾಗಿದೆ ಎಂದು ವಿವರಿಸಿದರು.


ಈ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರಿಂದ ಅವರದೇ ಸಹಿಯೊಂದಿಗೆ ಸಮಗ್ರ ಮಾಹಿತಿ ಸಂಗ್ರಹಿಸಲಾಗುವುದು. ಮತದಾರರ ಹೆಸರು, ವಿಳಾಸ, ಗುರುತಿನ ವಿವರಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ಪರಿಶೀಲಿಸಿ ನಿಖರವಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಹೇಳಿದರು. ಒಂದು ವೇಳೆ ಯಾವುದೇ ಬಿಎಲ್‌ಒ ಉದ್ದೇಶಪೂರ್ವಕವಾಗಿ ಅರ್ಹ ಮತದಾರರ ಹೆಸರನ್ನು ಕೈಬಿಟ್ಟರೆ ಅಥವಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಂಡು ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಅನ್ಬುಕುಮಾರ್ ಹೇಳಿದರು. ಇದು ಕೇವಲ ಚುನಾವಣಾ ಆಯೋಗದ ಹೊಣೆಗಾರಿಕೆಯಾಗಿಲ್ಲ. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎಣಿಕೆ ನಮೂನೆ (ಎನ್ಯುಮರೇಷನ್ ಫಾರ್ಮ್) ವಿತರಿಸುವುದರ ಜೊತೆಗೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಮತದಾರರು ಸಹ ಈ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು. ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳು ಹಾಗೂ ಸಾರ್ವಜನಿಕರ ಪ್ರಶ್ನೆಗಳಿಗೆ ತಕ್ಷಣ ಸ್ಪಂದಿಸಲು ಪ್ರತಿಯೊಂದು ಪಂಚಾಯಿತಿಯಲ್ಲೂ ಫೆಸಿಲಿಟೇಟಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.


ಸ್ವಚ್ಛ, ಪಾರದರ್ಶಕ ಹಾಗೂ ವಿಶ್ವಾಸಾರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ರಾಜ್ಯ ಚುನಾವಣಾ ಆಯೋಗದ ಪ್ರಮುಖ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಲು ಮತದಾರರ ಪಟ್ಟಿಯ ನಿಖರತೆ ಮತ್ತು ವಿಶ್ವಾಸಾರ್ಹತೆ ಅತ್ಯಂತ ಮೂಲಭೂತ ಅಂಶವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಿಗದಿಪಡಿಸಿರುವ ಮಾರ್ಗಸೂಚಿಗಳು ಮತ್ತು ವೇಳಾಪಟ್ಟಿಯ ಅನುಸಾರ ರಾಜ್ಯಾದ್ಯಂತ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಅನ್ಬುಕುಮಾರ್ ತಿಳಿಸಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default