ದಾವಣಗೆರೆ: ವರದಿ: www.suddilive.com ಶ್ರೀರಾಮನ ಜನ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಿವೃತ್ತ ಪ್ರೊಫೆಸರ್ ಕೆ.ಎಸ್. ಭಗವಾನ್ ವಿರುದ್ಧ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೂನ್ 9 ರಂದು ಹರಿಹರದ ‘ಪ್ರೊ. ಬಿ. ಕೃಷ್ಣಪ್ಪ ಮೈತ್ರಿವನ’ದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೆ.ಎಸ್. ಭಗವಾನ್, ಶ್ರೀರಾಮನ ಜನನದ ಹಿನ್ನೆಲೆಯನ್ನು ಪ್ರಶ್ನಿಸಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ರಾಜ ದಶರಥ ಪುತ್ರಕಾಮೇಷ್ಟಿ ಯಾಗ ಮಾಡಿದ ಸಂದರ್ಭವನ್ನು ಉಲ್ಲೇಖಿಸಿ ಅವರು ಆಡಿರುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹೇಳಿಕೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಮತ್ತು ನಂಬಿಕೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆಯ ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ಅವರು ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ಸನಾತನ ಧರ್ಮದ ಆರಾಧ್ಯ ದೈವದ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿರುವ ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ. ಸದ್ಯ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಅಡಿಯ ಕಲಂ 196(1)(a) ಮತ್ತು 299ರ ಅನ್ವಯ ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ಕಾನೂನು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಇತ್ತ ಭಗವಾನ್ ಅವರ ವಿವಾದಾತ್ಮಕ ಹೇಳಿಕೆಗೆ ರಾಜಕೀಯ ವಲಯದಲ್ಲೂ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಭಗವಾನ್ ಅವರಿಗೆ ವಯಸ್ಸಿನ ಕಾರಣವೋ ಅಥವಾ ಮಾನಸಿಕ ಸ್ಥಿಮಿತದ ಸಮಸ್ಯೆಯೋ ತಿಳಿಯುತ್ತಿಲ್ಲ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣದ ಬಗ್ಗೆ ಕನಿಷ್ಠ ಜ್ಞಾನವಿಲ್ಲದೆ, ಸ್ವಯಂಘೋಷಿತ ಬುದ್ಧಿಜೀವಿಯಂತೆ ವರ್ತಿಸುತ್ತಿರುವ ಇವರ ನಡೆ ಶೋಭೆ ತರುವುದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರೇ ಈ ದೇಶದಲ್ಲಿ 'ರಾಮರಾಜ್ಯ' ಬರಬೇಕೆಂದು ಬಯಸಿದ್ದರು ವಿನಃ ಗಾಂಧಿ ರಾಜ್ಯವನ್ನಲ್ಲ ಎಂದ ಉಗ್ರಪ್ಪ, ಭಗವಾನ್ ಗಾಂಧೀಜಿಗಿಂತ ದೊಡ್ಡ ಮನುಷ್ಯನೇ ಎಂದು ಪ್ರಶ್ನಿಸಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳ ಮೂಲಕ ಕೋಟ್ಯಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಪ್ರೊ. ಕೆ.ಎಸ್. ಭಗವಾನ್ ಅವರು ತಕ್ಷಣವೇ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಉಗ್ರಪ್ಪ ತೀವ್ರವಾಗಿ ಆಗ್ರಹಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

