ಮಂಗಳೂರು: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಅಗತ್ಯ ಕಾಮಗಾರಿಗಳನ್ನು ಹೊರತುಪಡಿಸಿ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಮಳೆಗಾಲದ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ವಿವಿಧ ಭಾಗಗಳಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಯೋಜನೆಗಳ ಕಾಮಗಾರಿಗಳಿಂದ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾಸ್ಥಿತಿಗೆ ತಂದು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗುವಂತೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಮಳೆ ನೀರಿನ ಸರಾಗ ಹರಿವಿಗೆ ಅಡ್ಡಿಯಾಗಿರುವ ಎಲ್ಲ ರೀತಿಯ ಒತ್ತುವರಿಗಳನ್ನು ಯಾವುದೇ ಒತ್ತಡಕ್ಕೆ ಮಣಿಯದೆ ತೆರವುಗೊಳಿಸಬೇಕು. ಮಳೆಗಾಲದಲ್ಲಿ ಪ್ರವಾಹ ಹಾಗೂ ಜಲಾವೃತ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ನಿರ್ಮಾಣ ಸಾಮಗ್ರಿಗಳು, ಮರಳು, ಜಲ್ಲಿ ಹಾಗೂ ಅವಶೇಷಗಳನ್ನು ಹಾಕಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ಗುರುತಿಸಿ ಕೂಡಲೇ ತೆರವುಗೊಳಿಸಬೇಕು ಎಂದು ಹೇಳಿದರು.
ಮಳೆ ಹಾಗೂ ಗಾಳಿಯಿಂದ ಮನೆಗಳಿಗೆ ಹಾನಿಯಾದ ಪ್ರಕರಣಗಳಲ್ಲಿ ವಿಳಂಬ ಮಾಡದೆ 48 ಗಂಟೆಗಳೊಳಗೆ ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸಬೇಕು. ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದ ನಿಯಮಾನುಸಾರ ತ್ವರಿತ ನೆರವು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆಗಾಗಿ ನೇಮಕಗೊಂಡಿರುವ ವಾರ್ಡುವಾರು ಇನ್ಸಿಡೆಂಟ್ ಕಮಾಂಡರ್‌ಗಳು ಸಾರ್ವಜನಿಕರ ಸೇವೆಗೆ ಸದಾ ಲಭ್ಯವಿರಬೇಕು. ತಮ್ಮ ವ್ಯಾಪ್ತಿಯ ಪ್ರತಿಯೊಂದು ಪ್ರದೇಶಕ್ಕೂ ಭೇಟಿ ನೀಡಿ ಸಮಸ್ಯಾತ್ಮಕ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಹಾನಿ ಅಥವಾ ಅನಾಹುತ ಸಂಭವಿಸಿದಲ್ಲಿ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆ ನಡೆಸಬೇಕು ಎಂದು ತಿಳಿಸಿದರು.
ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಕಂಟ್ರೋಲ್ ರೂಂ ಹಾಗೂ ಇತರೆ ಸಂಬಂಧಿತ ಇಲಾಖೆಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ಯುಜಿಡಿ ಬ್ಲಾಕ್ ಆಗಿ ಮಳೆ ನೀರು ರಸ್ತೆಗೆ ಹರಿದು ಜಲಾವೃತ ಸಮಸ್ಯೆ ಉಂಟಾಗದಂತೆ ವಿಶೇಷ ನಿಗಾ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಮಳೆಯಿಂದಾಗಿ ಸಂಚಾರ ದಟ್ಟಣೆ ಉಂಟಾದಲ್ಲಿ ಅರ್ಧ ಗಂಟೆಯೊಳಗೆ ಸಮಸ್ಯೆ ಪರಿಹರಿಸಿ ವಾಹನ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ರಾಜು ಕೆ, ಮಳೆಗಾಲ ಹಾಗೂ ವಿಪತ್ತು ನಿರ್ವಹಣಾ ಕರ್ತವ್ಯಗಳಿಗೆ ನಿಯೋಜಿಸಲಾದ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಗಳನ್ನು ನಿರ್ಲಕ್ಷಿಸಿದರೆ ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಾರ್ವಜನಿಕರ ಜೀವ ಹಾಗೂ ಆಸ್ತಿಪಾಸ್ತಿಯ ರಕ್ಷಣೆ ಅತ್ಯಂತ ಪ್ರಮುಖವಾಗಿದ್ದು, ಯಾವುದೇ ರೀತಿಯ ಕರ್ತವ್ಯ ಲೋಪ ಸಹಿಸಲಾಗುವುದಿಲ್ಲ ಎಂದು ಅವರು ಹೇಳಿದರು.
ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್ ಹೆಚ್.ಎನ್., ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿ ಮಳೆಗಾಲದ ಸಿದ್ಧತೆ, ತುರ್ತು ಪ್ರತಿಕ್ರಿಯೆ ವ್ಯವಸ್ಥೆ ಹಾಗೂ ವಿಪತ್ತು ನಿರ್ವಹಣಾ ಕ್ರಮಗಳ ಕುರಿತು ಚರ್ಚಿಸಿದರು.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

