ಉಡುಪಿ, ಜೂ.2: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಜೂನ್ 30ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲನಾ ಕಾರ್ಯ ನಡೆಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಈ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅನರ್ಹ ಹೆಸರುಗಳ ತೆರವು ಸೇರಿದಂತೆ ವಿವಿಧ ಪ್ರಕ್ರಿಯೆಗಳು ಈ ಅವಧಿಯಲ್ಲಿ ನಡೆಯಲಿವೆ ಎಂದರು.
ಈ ಪರಿಷ್ಕರಣೆಗೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದ್ದು, ಪರಿಷ್ಕರಣೆ ಕಾರ್ಯಗಳ ಬಳಿಕ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಅವರು ಮಾಹಿತಿ ನೀಡಿದರು. ಮತದಾರರು ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ತಮ್ಮ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ಪರಿಶೀಲಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.
ಜಿಲ್ಲೆಯ ಮತದಾರರ ಮಾಹಿತಿ ಸಂಗ್ರಹ ಹಾಗೂ ಮ್ಯಾಪಿಂಗ್ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಸುಮಾರು 56 ಸಾವಿರಕ್ಕೂ ಅಧಿಕ ಮತದಾರರು ಹೊರಜಿಲ್ಲೆ ಅಥವಾ ಹೊರ ರಾಜ್ಯಗಳಲ್ಲಿ ವಾಸಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸ್ವರೂಪ ಟಿ.ಕೆ. ತಿಳಿಸಿದರು. ಇಂತಹ ಮತದಾರರ ವಿವರಗಳನ್ನು ದೃಢೀಕರಿಸುವ ಕಾರ್ಯವೂ ಪರಿಷ್ಕರಣೆ ವೇಳೆ ಕೈಗೊಳ್ಳಲಾಗುವುದು ಎಂದರು.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,41,782 ಮತದಾರರಿದ್ದು, ಇವರಲ್ಲಿ 2,24,942 ಮಂದಿಯ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಇದು ಶೇ.93.04ರಷ್ಟು ಪ್ರಗತಿಯನ್ನು ಸೂಚಿಸುತ್ತಿದ್ದು, ಇನ್ನೂ 16,840 ಮತದಾರರ ಮ್ಯಾಪಿಂಗ್ ಕಾರ್ಯ ಬಾಕಿಯಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 2,12,551 ಮತದಾರರ ಪೈಕಿ 1,98,451 ಮಂದಿಯ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಶೇ.93.37ರಷ್ಟು ಪ್ರಗತಿ ಸಾಧಿಸಲಾಗಿದೆ. ಇಲ್ಲಿ 14,100 ಮತದಾರರ ಮ್ಯಾಪಿಂಗ್ ಕಾರ್ಯ ಇನ್ನೂ ಪೂರ್ಣಗೊಳ್ಳಬೇಕಿದೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 2,21,986 ಮತದಾರರಿದ್ದು, 1,94,403 ಮಂದಿಯ ಮ್ಯಾಪಿಂಗ್ ಕಾರ್ಯ ಮುಕ್ತಾಯಗೊಂಡಿದೆ. ಇದು ಶೇ.87.57ರಷ್ಟು ಪ್ರಗತಿಯಾಗಿದ್ದು, 27,583 ಮತದಾರರ ವಿವರ ಸಂಗ್ರಹ ಕಾರ್ಯ ಬಾಕಿಯಿದೆ.
ಕಾಪು ಕ್ಷೇತ್ರದಲ್ಲಿ ಒಟ್ಟು 1,94,706 ಮತದಾರರ ಪೈಕಿ 1,81,677 ಮಂದಿಯ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಶೇ.93.31ರಷ್ಟು ಪ್ರಗತಿ ದಾಖಲಾಗಿದೆ. ಇಲ್ಲಿ 13,029 ಮತದಾರರ ಮಾಹಿತಿ ಸಂಗ್ರಹ ಬಾಕಿಯಿದೆ.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 1,93,499 ಮತದಾರರಿದ್ದು, 1,85,712 ಮಂದಿಯ ಮ್ಯಾಪಿಂಗ್ ಪೂರ್ಣಗೊಂಡಿದೆ. ಶೇ.95.98ರಷ್ಟು ಪ್ರಗತಿಯೊಂದಿಗೆ ಕಾರ್ಕಳ ಕ್ಷೇತ್ರ ಜಿಲ್ಲೆಯಲ್ಲಿ ಅತ್ಯಧಿಕ ಮ್ಯಾಪಿಂಗ್ ಪೂರ್ಣಗೊಳಿಸಿದ ಕ್ಷೇತ್ರವಾಗಿ ಹೊರಹೊಮ್ಮಿದೆ. ಇಲ್ಲಿ ಕೇವಲ 7,787 ಮತದಾರರ ಮ್ಯಾಪಿಂಗ್ ಕಾರ್ಯ ಮಾತ್ರ ಬಾಕಿಯಿದೆ.
ಜಿಲ್ಲೆಯ ಒಟ್ಟು 10,64,524 ಮತದಾರರ ಪೈಕಿ 9,85,185 ಮಂದಿಯ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ಶೇ.92.55ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನೂ 79,339 ಮತದಾರರ ವಿವರ ಸಂಗ್ರಹ ಹಾಗೂ ಮ್ಯಾಪಿಂಗ್ ಕಾರ್ಯ ಪೂರ್ಣಗೊಳ್ಳಬೇಕಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಸಾರ್ವಜನಿಕರು ಸಹಕರಿಸಬೇಕು. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡಿದಾಗ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸುವ ಮೂಲಕ ಪ್ರಕ್ರಿಯೆಗೆ ನೆರವಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮನವಿ ಮಾಡಿದರು.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

