ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿ ತೀರ್ಪು ಪ್ರಕಟಿಸಿದೆ.
ಇದರಿಂದಾಗಿ ಜೈಲುವಾಸ ಅನುಭವಿಸುತ್ತಿದ್ದ ವಿನಯ್ ಕುಲಕರ್ಣಿ ಅವರಿಗೆ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ.
ಹೈಕೋರ್ಟ್ ತೀರ್ಪಿನನ್ವಯ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಚನ್ನಕೇಶವ ಟಿಂಗರಿಕರ್ ಅವರಿಗೂ ಜಾಮೀನು ಲಭಿಸಿದೆ. ಜಾಮೀನು ಮಂಜೂರು ಮಾಡುವ ವೇಳೆ ಹೈಕೋರ್ಟ್ ಕೆಲವು ಕಠಿಣ ಷರತ್ತುಗಳನ್ನು ವಿಧಿಸಿದ್ದು, ಅರ್ಜಿದಾರರು 5 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಶೂರಿಟಿ ಒದಗಿಸಬೇಕು ಎಂದು ಸೂಚಿಸಿದೆ. ಜೊತೆಗೆ, ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶ ತೊರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.
ಅಷ್ಟೇ ಅಲ್ಲದೆ, ವಿನಯ್ ಕುಲಕರ್ಣಿ ಅವರನ್ನು 'ದೋಷಿ' ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೂ ಹೈಕೋರ್ಟ್ ಸದ್ಯ ತಡೆಯಾಜ್ಞೆ ನೀಡಿದೆ.ಶಿಕ್ಷೆ ಹಾಗೂ ದೋಷಮುಕ್ತತೆಯ ಆದೇಶಕ್ಕೆ ತಡೆ ಬಿದ್ದಿರುವುದರಿಂದ, ಜನಪ್ರತಿನಿಧಿ ಕಾಯ್ದೆಯಡಿ ಅಪಾಯದಲ್ಲಿದ್ದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನದ ರಾಜಕೀಯ ಭವಿಷ್ಯಕ್ಕೆ ಇದೀಗ ಮರುಜೀವ ಬಂದಂತಾಗಿದೆ.
ಪ್ರಕರಣದ ಹಿನ್ನೆಲೆ:
2016ರಲ್ಲಿ ಧಾರವಾಡದ ಜಿಮ್‌ವೊಂದರಲ್ಲಿ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಹತ್ಯೆ ನಡೆದಿತ್ತು. ಆರಂಭದಲ್ಲಿ ಲೋಕಲ್ ಪೊಲೀಸರು ತನಿಖೆ ನಡೆಸಿದ್ದ ಈ ಪ್ರಕರಣವನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆ ನಡೆಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಹಲವರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ದೋಷಿ ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿತ್ತು.ಈ ತೀರ್ಪನ್ನು ಸವಾಲಾಗಿ ಸ್ವೀಕರಿಸಿ ವಿನಯ್ ಕುಲಕರ್ಣಿ ಹಾಗೂ ಇತರ ಆರೋಪಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

