ಕಾರವಾರ, ಜು. 19: ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಅಭಿವೃದ್ಧಿ ಮಂಡಳಿಗೆ ಪರಿಣಾಮಕಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕನಿಷ್ಠ ₹100 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ತಿಳಿಸಿದ್ದಾರೆ.
ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕರಾವಳಿ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರ ಮಂಡಳಿಗೆ ₹10 ಕೋಟಿ ಅನುದಾನವನ್ನು ನೀಡಿದೆ. ಈ ಅನುದಾನವನ್ನು ಮೂರು ಕರಾವಳಿ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಆದರೆ, ಇಷ್ಟು ಕಡಿಮೆ ಅನುದಾನದಲ್ಲಿ ಸಾರ್ವಜನಿಕರ ಪ್ರಮುಖ ಬೇಡಿಕೆಗಳನ್ನು ಪೂರೈಸುವುದು ಕಷ್ಟಕರವಾಗಿದೆ ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕನಿಷ್ಠ ₹100 ಕೋಟಿ ಅನುದಾನ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.
ಕರಾವಳಿ ಪ್ರದೇಶದ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೇರಳದ ಕೊಚ್ಚಿ ಹಾಗೂ ತಮಿಳುನಾಡಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದೆ. ಕೊಚ್ಚಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಮೆಟ್ರೋ ಮಾದರಿಯನ್ನು ಕರ್ನಾಟಕದಲ್ಲೂ ಜಾರಿಗೆ ತರುವ ಕುರಿತು ಚಿಂತನೆ ನಡೆಯುತ್ತಿದೆ. ಜೊತೆಗೆ ರಾಜ್ಯದಲ್ಲಿನ ಹಡಗು ನಿರ್ಮಾಣ ಕೇಂದ್ರಗಳನ್ನು ಆಧುನೀಕರಿಸುವುದರೊಂದಿಗೆ ಹೊನ್ನಾವರದಲ್ಲಿ ಹೊಸ ಹಡಗು ನಿರ್ಮಾಣ ಕೇಂದ್ರ ಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಕರಾವಳಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಹವಾಮಾನ ವೈಪರೀತ್ಯದ ಪರಿಣಾಮಗಳ ಕುರಿತು ಸಮಗ್ರ ಅಧ್ಯಯನ ನಡೆಸಿ, ತಜ್ಞರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗುವುದು ಎಂದರು.
ಸೀ ಪ್ಲೇನ್ ಯೋಜನೆ ಜಾರಿಗೆ ಪ್ರಯತ್ನ
ಉಡಾನ್ ಯೋಜನೆಯಡಿ ಕರಾವಳಿ ಭಾಗದಲ್ಲಿ ಸೀ ಪ್ಲೇನ್ಸೇ ವೆ ಆರಂಭಿಸಲು ಅನುಮತಿ ದೊರೆತರೆ ರಾಜ್ಯದ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ಸಿಗಲಿದೆ. ಈ ಯೋಜನೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗಫೂರ್ ತಿಳಿಸಿದರು.
ಅದೇ ವೇಳೆ ಮಂಡಳಿಯಿಂದ ಮಂಜೂರಾದ ಕಾಮಗಾರಿಗಳನ್ನು ಸಂಬಂಧಿತ ಇಲಾಖೆ ಗುಣಮಟ್ಟ ಕಾಪಾಡಿಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಸದಸ್ಯರಿಂದ ವಿವಿಧ ಅಭಿವೃದ್ಧಿ ಸಲಹೆಗಳು
ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಮಲೆನಾಡು ಪ್ರದೇಶದಲ್ಲಿ ಕಾಲುಸಂಕ, ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ ಆಗುವ ತೊಂದರೆ ನಿವಾರಣೆಗೆ ಬ್ರಿಡ್ಜ್-ಕಮ್-ಬ್ಯಾರೇಜ್‌ಗಳನ್ನು ನಿರ್ಮಿಸುವ ಅಗತ್ಯವಿದೆ ಎಂದರು. ಜೊತೆಗೆ ಜಲಪಾತಗಳ ಬಳಿ ಸಂಪೂರ್ಣ ನಿಷೇಧ ಹೇರದೇ, ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ತಲಪಾಡಿಯಿಂದ ಕಾರವಾರದವರೆಗೆ ಕಡಲ್ಕೊರೆತ ನಿಯಂತ್ರಣಕ್ಕೂ ಸಹಕಾರಿಯಾಗುವ ರೀತಿಯಲ್ಲಿ ಸಮುದ್ರ ತೀರದ ರಿಂಗ್‌ರೋಡ್ ನಿರ್ಮಾಣದ ಅಗತ್ಯವನ್ನು ಪ್ರಸ್ತಾಪಿಸಿದರು.
ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಬುಡ್ನ ಸಿದ್ದಿ, ಕರಾವಳಿ ಭಾಗದ ಬುಡಕಟ್ಟು ಸಮುದಾಯಗಳು ವಾಸಿಸುವ ಪ್ರದೇಶಗಳಿಗೆ ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದರು. ಮತ್ತೋರ್ವ ಸದಸ್ಯ ಗಣಪತಿ ಉಳ್ವೇಕರ್ ಮೀನುಗಾರರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಒತ್ತಾಯಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ ಉಪಸ್ಥಿತರಿದ್ದರು.
ಕರಾವಳಿಯಲ್ಲಿ ಕೋಸ್ಟಲ್ ಟೂರಿಸಂಗೆ ಆದ್ಯತೆ
ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಎ. ಗಫೂರ್, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೋಸ್ಟಲ್ ಟೂರಿಸಂ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಕಾಳಿ, ಶರಾವತಿ ಹಾಗೂ ಅಘನಾಶಿನಿ ನದಿಗಳ ಹಿನ್ನೀರಿನಲ್ಲಿ ಕೇರಳ ಮಾದರಿಯ ರಿವರ್ ಟೂರಿಸಂ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ. ಈ ಸಂಬಂಧ ಕೆಲ ನದಿಗಳಲ್ಲಿ ವಾಟರ್ ಮೆಟ್ರೋ ಹಾಗೂ ಬೋಟ್ ಸಂಚಾರಕ್ಕೆ ಅಗತ್ಯವಾದ ಸಾಧ್ಯತಾ ಅಧ್ಯಯನ ಪೂರ್ಣಗೊಂಡಿದ್ದು, ವರದಿ ಅಂತಿಮ ಹಂತದಲ್ಲಿದೆ. ಬೋಟ್ ಟ್ರಾಫಿಕ್ ನಿಯಂತ್ರಣ ಕುರಿತ ಸಮೀಕ್ಷೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅವರು ಮುಂದುವರಿದು, ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿಯಾಗಿ ಪರಿವರ್ತಿಸಿರುವುದರಿಂದ ಸದಸ್ಯರ ಸಂಖ್ಯೆಯೂ ಹೆಚ್ಚಿದ್ದು, ಮೂರು ಕರಾವಳಿ ಜಿಲ್ಲೆಗಳ ಸಂಸದರು ಹಾಗೂ ಶಾಸಕರಿಂದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಉಪಯುಕ್ತ ಸಲಹೆಗಳು ಸಭೆಯಲ್ಲಿ ಬಂದಿವೆ ಎಂದು ಹೇಳಿದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

