ಉಡುಪಿ, ಜು.25: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR-2026) ಕಾರ್ಯವನ್ನು ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆಸಿ, ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯಾದ್ಯಂತ ನಡೆಯುತ್ತಿರುವ SIR ಮನೆ-ಮನೆ ಸಮೀಕ್ಷೆಯ ಸಂದರ್ಭದಲ್ಲಿ, 2002ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಆಗದ ಮತದಾರರು ಕೂಡ ತಮ್ಮ ವೈಯಕ್ತಿಕ ವಿವರಗಳನ್ನು ಎನುಮರೇಷನ್ ಫಾರಂನ ಕೊನೆಯ ಕಾಲಂನಲ್ಲಿ ನಮೂದಿಸಿ, ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಲ್ಲಿಸಬಹುದು ಎಂದು ಅನ್ಬುಕುಮಾರ್ ತಿಳಿಸಿದರು.
ಬಿಎಲ್‌ಒಗಳು ಮನೆಗೆ ಭೇಟಿ ನೀಡಿದ ವೇಳೆ ಸಂಬಂಧಪಟ್ಟ ಮತದಾರರು ಮನೆಯಲ್ಲಿ ಇಲ್ಲದಿದ್ದರೆ, ಅವರ ಕುಟುಂಬದ ಯಾವುದೇ ವಯಸ್ಕ ಸದಸ್ಯರು ಅವರ ಪರವಾಗಿ ಸಹಿ ಮಾಡಿ ಗಣತಿ ನಮೂನೆಯನ್ನು ಬಿಎಲ್‌ಒಗೆ ಸಲ್ಲಿಸಬಹುದಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಂದ ಸ್ವೀಕರಿಸಲಾದ ಎನುಮರೇಷನ್ ಫಾರಂಗಳ ಡಿಜಿಟಲೀಕರಣ ಕಾರ್ಯದಲ್ಲಿ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿರುವುದಕ್ಕೆ ಮುಖ್ಯ ಚುನಾವಣಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಜಿಲ್ಲೆಯಲ್ಲಿ SIR-2026 ಪ್ರಕ್ರಿಯೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಜುಲೈ 25ರ ಸಂಜೆ 4 ಗಂಟೆಯವರೆಗೆ ಜಿಲ್ಲೆಯಲ್ಲಿ ಒಟ್ಟು 9,40,340 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಶೇ.88.39ರಷ್ಟು ಪ್ರಗತಿ ಸಾಧಿಸಲಾಗಿದೆ. ಮನೆ-ಮನೆ ಭೇಟಿ ವೇಳೆ 14,835 ಮತದಾರರು ಮೃತಪಟ್ಟಿರುವುದು ಪತ್ತೆಯಾಗಿದ್ದು, 14,426 ಮಂದಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವುದು ಹಾಗೂ 5,225 ಮತದಾರರು ತಮ್ಮ ದಾಖಲೆಗಳನ್ನು ಸಲ್ಲಿಸಿರುವುದು ಕಂಡುಬಂದಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯವನ್ನು ತಮ್ಮ ವ್ಯಾಪ್ತಿಯಲ್ಲಿ ಶೇ.100ರಷ್ಟು ಪೂರ್ಣಗೊಳಿಸಿದ ಬಿಎಲ್‌ಒಗಳನ್ನು ಗೌರವಿಸಲಾಯಿತು. 118-ಬೈಂದೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 125ರ ಪವಿತ್ರ ಪೂಜಾರಿ, 119-ಕುಂದಾಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 135ರ ಲಕ್ಷ್ಮೀ ಶೆಡ್ತಿ, 120-ಉಡುಪಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 33ರ ಪ್ರಸನ್ನಿ, 121-ಕಾಪು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 190ರ ಹೇಮಾ ಪೂಜಾರ್ತಿ ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 41ರ ಜ್ಯೋತಿರಾವ್ ಸೇರ್ವೆಗಾರ್ ಅವರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

