ಮಂಗಳೂರು: ಅಯೋಧ್ಯೆ ರಾಮಮಂದಿರದ ಹುಂಡಿ ಕಳವು ಪ್ರಕರಣವು ಕೋಟ್ಯಂತರ ರಾಮಭಕ್ತರ ನಂಬಿಕೆಗೆ ಧಕ್ಕೆ ತಂದಿದ್ದು, ಇದರ ಹೊಣೆಗಾರಿಕೆಯಿಂದ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಿಜೆಪಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆರೋಪಿಸಿದರು.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಸಿಬಿಐ ಮೌನ ವಹಿಸಿರುವುದನ್ನು ಪ್ರಶ್ನಿಸಿದರು.
"ತಮ್ಮನ್ನು ದೇಶದ ಚೌಕಿದಾರ್ ಎಂದು ಹೇಳಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ನೇಮಕ ಮಾಡಿದ ಟ್ರಸ್ಟ್ ಸದಸ್ಯರ ಮೇಲೆಯೇ ಕಳವು ಆರೋಪ ಕೇಳಿಬಂದಿದೆ. ಇಷ್ಟೊಂದು ಗಂಭೀರ ವಿಷಯದ ಕುರಿತು ಪ್ರಧಾನಿ ತಮ್ಮ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲೂ ಪ್ರಸ್ತಾಪಿಸಿಲ್ಲ," ಎಂದು ಅವರು ವ್ಯಂಗ್ಯವಾಡಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಪಕ್ಷದ ಸಂಘಟನೆಗೆ ಪ್ರಚಾರ ಸಮಿತಿಯು ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಚುರುಕಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಸೊರಕೆ ಹೇಳಿದರು. ರಾಜ್ಯ ಸರ್ಕಾರದ ಜನಪರ ಯೋಜನೆಗಳು ಹಾಗೂ ಐದು ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮರೋಳಿ, "ರಾಮನ ಹುಂಡಿ ಕದ್ದವರು ಮತದಾರರ ಹಕ್ಕನ್ನೂ ಕಸಿಯುವ ಸಾಧ್ಯತೆ ಇದೆ" ಎಂಬ ಸಂದೇಶದೊಂದಿಗೆ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.
ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ ಎಂದು ಆರೋಪಿಸಿದ ಅವರು, ಟ್ರಸ್ಟ್‌ನಲ್ಲಿದ್ದವರು ಆರ್‌ಎಸ್‌ಎಸ್ ಹಾಗೂ ಬಿಜೆಪಿ ಪದಾಧಿಕಾರಿಗಳೇ ಆಗಿದ್ದು, ದೇವರ ಹಣ, ಚಿನ್ನ, ಬೆಳ್ಳಿ ಹಾಗೂ ನಗದು ದುರ್ಬಳಕೆಯಾಗಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಬಿಜೆಪಿ ನಾಯಕರು ಮೌನವಾಗಿರುವುದು ಏಕೆ ಎಂದು ಪ್ರಶ್ನಿಸಿದರು.
ಈ ವೇಳೆ ವಿಧಾನಸಭಾ ಕ್ಷೇತ್ರಗಳ ನೂತನ ಪ್ರಚಾರ ಸಮಿತಿ ಅಧ್ಯಕ್ಷರಾದ ಹೈದರ್ ಕೈರಂಗಳ, ವಸಂತ್ ಬರ್ನಾಡ್, ಸಂತೋಷ್ ಲೂಯಿಸ್ ಡಿಕೋಸ್ಟಾ, ರಮಾನಂದ ಪೂಜಾರಿ ಸೇರಿದಂತೆ ವಿವಿಧ ಬ್ಲಾಕ್ ಅಧ್ಯಕ್ಷರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡೇನಿಸ್ ಡಿಸಿಲ್ವಾ ಮಾತನಾಡಿ, ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ಪ್ರಚಾರ ಸಮಿತಿಗಳನ್ನು ಇನ್ನಷ್ಟು ಬಲಪಡಿಸಬೇಕು. ಶೀಘ್ರದಲ್ಲೇ ಪ್ರತಿಯೊಂದು ಬ್ಲಾಕ್‌ನಲ್ಲಿ ಸಮಿತಿಗಳನ್ನು ರಚಿಸಿ, ಬೂತ್ ಮಟ್ಟದವರೆಗೆ ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಹಿಸಿದ್ದರು. ಮಾಜಿ ಶಾಸಕ ಜೆ.ಆರ್. ಲೋಬೊ, ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಲಿ ಪುತ್ತೂರು, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸೇರಿದಂತೆ ಪಕ್ಷದ ಹಲವು ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಆರಂಭದಲ್ಲಿ ಡಿಸಿಸಿ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿದರು. ಮಂಗಳೂರು ನಗರ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಉದಯ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

