}

ಬಸವನಗುಡಿ, ಪುತ್ತೂರು ಘಟನೆಗಳು ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬುದಕ್ಕೆ ಸಾಕ್ಷಿ: ಯಶ್‌ಪಾಲ್ ಸುವರ್ಣ

suddilive.com
By -
0

 



ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ಮತೀಯ ಶಕ್ತಿಗಳಿಗೆ ಪೊಲೀಸರ ಭಯವೇ ಇಲ್ಲದಂತಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುವ ಘಟನೆಗಳು ಹೆಚ್ಚುತ್ತಿದ್ದು, ಬಹುಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ.


ಬೆಂಗಳೂರು ಬಸವನಗುಡಿಯಲ್ಲಿ ಈದ್ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಜೀವ ಬೆದರಿಕೆಯ ಘೋಷಣೆಗಳನ್ನು ಕೂಗಿರುವುದು ಹಾಗೂ ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.


ಇದೇ ವೇಳೆ, ಪುತ್ತೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ಹಾಗೂ ಬಳಿಕ ಪೊಲೀಸ್ ಜೀಪ್‌ನೊಳಗೆ ಪ್ರವೇಶಿಸಿ ಪೊಲೀಸರ ಸಮ್ಮುಖದಲ್ಲೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಇಂತಹ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಸುವರ್ಣ ಟೀಕಿಸಿದ್ದಾರೆ.


ಪೊಲೀಸ್ ಇಲಾಖೆಯನ್ನು ಸರ್ಕಾರ ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ. ಕಣ್ಣೆದುರೇ ಘಟನೆಗಳು ನಡೆಯುತ್ತಿದ್ದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು.


ಮತೀಯ ಶಕ್ತಿಗಳು ಪುಂಡಾಟಿಕೆ ಮುಂದುವರಿಸಿ ಹಿಂದೂ ಕಾರ್ಯಕರ್ತರು ಹಾಗೂ ಹಿಂದೂ ಸಮಾಜವನ್ನು ಪ್ರಚೋದಿಸುವ ಪ್ರಯತ್ನ ನಡೆಸಿದರೆ, ಹಿಂದೂ ಸಮಾಜ ತಕ್ಕ ಉತ್ತರ ನೀಡಬೇಕಾದ ಅನಿವಾರ್ಯತೆ ಎದುರಾಗಬಹುದು. ಪುತ್ತೂರು ಬಂದ್‌ಗೆ ಹಿಂದೂ ಸಮಾಜ ನೀಡಿದ ಬೆಂಬಲ ಇದಕ್ಕೆ ಸಾಕ್ಷಿಯಾಗಿದೆ ಎಂದು ಯಶ್‌ಪಾಲ್ ಸುವರ್ಣ ಹೇಳಿದರು.


ಬಸವನಗುಡಿಯಲ್ಲಿ ಗಲಾಟೆ ನಡೆಸಿದವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡುವುದನ್ನೇ ಪ್ರಮುಖ ವಿಚಾರವನ್ನಾಗಿ ಮಾಡಿಕೊಂಡಿರುವ ಗೃಹ ಸಚಿವರು, ಇನ್ನಾದರೂ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯತ್ತ ಗಮನಹರಿಸಬೇಕು ಎಂದು ಅವರು ಆಗ್ರಹಿಸಿದರು.


ಸರ್ಕಾರ ಇದೇ ರೀತಿ ನಿರ್ಲಕ್ಷ್ಯ ಮುಂದುವರಿಸಿದರೆ, ರಾಜ್ಯದ ಹಿಂದೂ ಸಮಾಜ ಸರ್ಕಾರದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಬಳಿಕ ತಮ್ಮ ರಕ್ಷಣೆಗೆ ತಾವೇ ಮುಂದಾಗುವ ಸನ್ನಿವೇಶ ಎದುರಾಗಬಹುದು ಎಂದು ಯಶ್‌ಪಾಲ್ ಸುವರ್ಣ ಎಚ್ಚರಿಕೆ ನೀಡಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default