ಉಡುಪಿ, ಆಗಸ್ಟ್ 3: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಯನ್ನು ಮಾರ್ಗಸೂಚಿಯಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಯುವಕರನ್ನು ಸಮಾಜಸೇವಾ ಚಟುವಟಿಕೆಗಳು, ಸಮುದಾಯ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ, ಫಿಟ್‌ನೆಸ್ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸಂಘಗಳ ರಚನೆ ಮತ್ತು ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳಲ್ಲಿ ತಲಾ ಒಂದರಂತೆ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಅಲ್ಲದೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು, ಪುರಸಭೆ ವ್ಯಾಪ್ತಿಯಲ್ಲಿ 6 ಸಾವಿರ ಜನಸಂಖ್ಯೆಗೆ ಒಂದು ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ರಚಿಸಲಾಗುವುದು ಎಂದು ತಿಳಿಸಿದರು. ಪ್ರತಿ ಸಂಘಕ್ಕೂ ಸರ್ಕಾರ ಹಂತ ಹಂತವಾಗಿ ಅನುದಾನ ಒದಗಿಸಲಿದೆ ಎಂದರು.
16 ರಿಂದ 35 ವರ್ಷ ವಯಸ್ಸಿನ ಯುವಕ-ಯುವತಿಯರು ಈ ಸಂಘಗಳ ಸದಸ್ಯರಾಗಲು ಅವಕಾಶವಿದ್ದು, ಪ್ರತಿ ಸಂಘದಲ್ಲಿ ಕನಿಷ್ಠ 100 ಸದಸ್ಯರು ಇರಬೇಕು. ಸಂಘಗಳ ನೋಂದಣಿ ಪ್ರಕ್ರಿಯೆ ಆಗಸ್ಟ್ 6ರಿಂದ ಬಿ.ಜೆ.ವೈ.ಎಸ್. (BJYS) ವೆಬ್‌ಸೈಟ್‌ನಲ್ಲಿ ಆರಂಭವಾಗಲಿದ್ದು, ಯುವಜನರು ಆನ್‌ಲೈನ್ ಮೂಲಕ ಸದಸ್ಯತ್ವ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಸಂಘವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗುವ 15 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಹೊಂದಿರಲಿದೆ. ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಚಿ ಸೇರಿದಂತೆ 15 ಸದಸ್ಯರ ಸಮಿತಿಯಲ್ಲಿ ಮಹಿಳಾ ಪ್ರಾತಿನಿಧ್ಯ ಹಾಗೂ ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಯುವಜನರ ಸಕ್ರಿಯ ಭಾಗವಹಿಸುವಿಕೆಯನ್ನು ಖಚಿತಪಡಿಸಿ ಸಂಘಗಳ ರಚನೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಯೋಜನೆ ಕುರಿತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಜಿಂಗಲ್ಸ್ ಸೇರಿದಂತೆ ವಿವಿಧ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ನೋಂದಣಿ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯೋಜನೆಯ ಅನುಷ್ಠಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

