ಮಲ್ಪೆ, ಆ. 5: ಈ ಸಾಲಿನ ಮೀನುಗಾರಿಕಾ ಋತು ಆರಂಭವಾಗಿರುವ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆ ನಡೆಸಲು ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚಿಸಿದರು.
ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮೀನುಗಾರ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಲ್ಪೆ ಬಂದರಿನ ಮುಖ್ಯ ಪ್ರವೇಶ ದ್ವಾರದ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಆ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗುರುತಿಸಿರುವ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ಸುಗಮವಾಗುವಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಬಂದರು ಪ್ರದೇಶದಲ್ಲಿ ವಾಹನಗಳ ಸುಸೂತ್ರ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಮುಂಜಾನೆ 3 ಗಂಟೆಯಿಂದಲೇ ಸಿಬ್ಬಂದಿಯನ್ನು ನಿಯೋಜಿಸುವಂತೆ ಹಾಗೂ ಕರಾವಳಿ ಕಾವಲು ಪೊಲೀಸ್ ಇಲಾಖೆಯು ಬಂದರಿನ ಚಟುವಟಿಕೆಗಳಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು.
ಬಂದರು ಇಲಾಖೆಯು ಗುರುತಿಸಿರುವ ಸ್ಥಳಗಳಲ್ಲಿ ಪೊಲೀಸ್ ಇಲಾಖೆಯ ಸಲಹೆ ಪಡೆದು ಉತ್ತಮ ಗುಣಮಟ್ಟದ ಆಧುನಿಕ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸಲಹೆ ನೀಡಿದ ಅವರು, ಮುಖ್ಯ ಪ್ರವೇಶ ದ್ವಾರದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಕಾಮಗಾರಿಗಾಗಿ ಸಂಗ್ರಹಿಸಿರುವ ಮರಳನ್ನು ಪಾರ್ಕಿಂಗ್ ಪ್ರದೇಶದಿಂದ ತಕ್ಷಣ ತೆರವುಗೊಳಿಸುವಂತೆ ಸೂಚಿಸಿದರು.
ಬಂದರಿನ ನಿರ್ವಹಣೆ ಹೊಣೆ ಹೊತ್ತಿರುವ ಕೆಎಫ್‌ಡಿಸಿ (KFDC) ಸ್ವಚ್ಛತೆ ಹಾಗೂ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮೀನುಗಾರರ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅಗತ್ಯವಿರುವ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವಂತೆ ಅವರು ತಿಳಿಸಿದರು.
ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಡೀಸೆಲ್ ಪಾಸ್‌ಬುಕ್ ನವೀಕರಣ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಮೀನುಗಾರಿಕಾ ಬೋಟುಗಳಿಗೆ ಡೀಸೆಲ್ ಪೂರೈಕೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಕ್ರಮವಹಿಸಬೇಕು ಎಂದರು. ಜೊತೆಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಮೀನುಗಾರರ ಸಂಘದ ಸಹಯೋಗದಲ್ಲಿ ಅರ್ಹ ಮೀನುಗಾರರಿಗೆ ತಲುಪಿಸುವಂತೆ ಸೂಚಿಸಿದರು.
ಸಭೆಯಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ, ನಿಕಟಪೂರ್ವ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಕಾರ್ಯದರ್ಶಿ ಜಗನ್ನಾಥ ಕಡೆಕಾರು, ಮೀನುಗಾರ ಮುಖಂಡರಾದ ರಾಮಚಂದ್ರ ಕುಂದರ್, ಸಾಧು ಸಾಲ್ಯಾನ್, ರಮೇಶ್ ಕೋಟ್ಯಾನ್, ಕಿಶೋರ್ ಡಿ. ಸುವರ್ಣ, ಮಧುಕರ್, ಕರುಣಾಕರ ಸಾಲ್ಯಾನ್, ದಯಾಕರ ಸುವರ್ಣ, ಸುರೇಶ್ ಬಿ. ಕುಂದರ್, ಪ್ರಕಾಶ್ ಬಂಗೇರ, ಗೀತಾ ಕರ್ಕೇರ, ಗೋಪಾಲ ಆರ್. ಕೆ., ನಾಗರಾಜ ಕುಂದರ್ ಸೇರಿದಂತೆ ಮೀನುಗಾರಿಕೆ, ಬಂದರು, ಕರಾವಳಿ ಕಾವಲು ಪೊಲೀಸ್, ಪೊಲೀಸ್, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ವಿವಿಧ ಮೀನುಗಾರಿಕಾ ಸಹಕಾರಿ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

