}

ಮಂಗಳೂರು: ತಂಗಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ: ಆರೋಪಿಗೆ 4 ವರ್ಷ ಜೈಲು ಶಿಕ್ಷೆ

suddilive.com
By -
0

 



ಮಂಗಳೂರು, ಆ. 26: ಕ್ಷುಲ್ಲಕ ವಿಚಾರಕ್ಕೆ ತನ್ನ ಸ್ವಂತ ತಂಗಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.


ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಆರೋಪಿ. ನ್ಯಾಯಾಲಯವು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 304(II) ಅಡಿಯಲ್ಲಿ ನಾಲ್ಕು ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ. ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಐಪಿಸಿ ಕಲಂ 201ರ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹1,000 ದಂಡ ವಿಧಿಸಲಾಗಿದೆ. ನ್ಯಾಯಾಲಯವು ಆ.24ರಂದು ತೀರ್ಪು ಪ್ರಕಟಿಸಿದೆ.


2019ರ ಅಕ್ಟೋಬರ್ 8ರಂದು ಮಧ್ಯಾಹ್ನ ಕಂಬಳಪದವಿನಲ್ಲಿರುವ ಮನೆಯಲ್ಲಿ ಘಟನೆ ನಡೆದಿತ್ತು. ಸ್ಯಾಮ್ಸನ್ ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಅವರ ಬಳಿ ಮೊಬೈಲ್ ಫೋನ್ ಬಳಸಲು ನೀಡುವಂತೆ ಕೇಳಿದ್ದ. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಜಗಳವಾಗಿತ್ತು.


ಈ ವೇಳೆ ಕೋಪಗೊಂಡ ಸ್ಯಾಮ್ಸನ್ ಸುತ್ತಿಗೆಯಿಂದ ಫಿಯೋನಾ ಅವರ ತಲೆಗೆ ಬಲವಾಗಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದರು. ಬಳಿಕ ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಮನೆಯ ಹಿಂಭಾಗದಲ್ಲಿದ್ದ ಪೊದೆಯಲ್ಲಿ ಬಚ್ಚಿಟ್ಟಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.


ಮಗಳು ಕಾಣೆಯಾಗಿರುವುದಾಗಿ ಫಿಯೋನಾ ಅವರ ತಂದೆ ಫ್ರಾನ್ಸಿಸ್ ಕುಟಿನ್ಹಾ ಪೊಲೀಸರಿಗೆ ದೂರು ನೀಡಿದ್ದರು. ಆರಂಭದಲ್ಲಿ ಕೊಣಾಜೆ ಪೊಲೀಸರು ಐಪಿಸಿ ಕಲಂ 363ರ ಅಡಿಯಲ್ಲಿ ಅಪಹರಣ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.


ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ದಕ್ಷಿಣ ಉಪವಿಭಾಗದ ಅಂದಿನ ಎಸಿಪಿ ಟಿ. ಕೋದಂಡ ರಾಮ್ ಅವರು ತನಿಖೆ ಮುಂದುವರಿಸಿ ಘಟನೆ ಹಿಂದಿನ ಕೊಲೆ ರಹಸ್ಯವನ್ನು ಬಯಲಿಗೆಳೆದಿದ್ದರು. ಬಳಿಕ ಪೊಲೀಸರು ತನಿಖೆ ಪೂರ್ಣಗೊಳಿಸಿ 2020ರ ಜನವರಿ 10ರಂದು ಐಪಿಸಿ ಕಲಂ 302 ಮತ್ತು 201ರ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.


ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಅವರಿಗೆ ಶಿಕ್ಷೆ ವಿಧಿಸಿದೆ. ಅಭಿಯೋಜನ ಪರವಾಗಿ ಜ್ಯೋತಿ ಪ್ರಮೋದ ನಾಯಕ್ ವಾದ ಮಂಡಿಸಿದ್ದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default