ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸೆ. 5ರಿಂದ ಪ್ರತೀ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ‘ಪ್ರಜಾಸೇವಾ ಆಂದೋಲನ’ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳ ಆಯೋಜನೆ ಹಾಗೂ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ. 5ರಿಂದ ಪ್ರತಿ ತಿಂಗಳ 1ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಸಭೆಗಳನ್ನು ನಡೆಸಲಾಗುವುದು. 2ನೇ ಮತ್ತು 4ನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗಳಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಸರಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.
ಇಲಾಖೆಗಳ ಮಾಹಿತಿ ಮಳಿಗೆ
ಪ್ರಜಾಸೇವಾ ಆಂದೋಲನ ಸಭೆ ನಡೆಯುವ ಸ್ಥಳಗಳಲ್ಲಿ ಜಿಲ್ಲೆಯ ಪ್ರಮುಖ ಇಲಾಖೆಗಳು ವಸ್ತು ಪ್ರದರ್ಶನ ಹಾಗೂ ಮಾಹಿತಿ ಮಳಿಗೆಗಳನ್ನು ಸ್ಥಾಪಿಸಬೇಕು. ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ವಿವಿಧ ಸೇವೆಗಳು ಮತ್ತು ಸೌಲಭ್ಯಗಳ ಕುರಿತು ಈ ಮಳಿಗೆಗಳಲ್ಲಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಫಲಾನುಭವಿಗಳಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಗಳಿದ್ದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಸಭೆಗಳಲ್ಲಿ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಸಭೆಗೂ 15 ದಿನ ಮುನ್ನ ಮನೆ ಮನೆಗೆ ಅರ್ಜಿ
ಪ್ರಜಾಸೇವಾ ಆಂದೋಲನ ಸಭೆ ನಡೆಯುವ 15 ದಿನಗಳ ಮುಂಚಿತವಾಗಿ ಕ್ಷೇತ್ರ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲುಗಳಿಗೆ ಸಂಬಂಧಿಸಿದ ಪೂರ್ವ ಮುದ್ರಿತ ಅರ್ಜಿ ನಮೂನೆಗಳನ್ನು ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆ ನಡೆಯುವ ಸ್ಥಳಗಳಲ್ಲಿ ಗಣಕಯಂತ್ರ, ಇಂಟರ್‌ನೆಟ್, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸ್ಥಳದಲ್ಲಿ ಪಡೆಯಲು ಅನುಕೂಲವಾಗುವಂತೆ ಇಲಾಖಾವಾರು ಕೌಂಟರ್‌ಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗಳಿಗೆ ಕಡ್ಡಾಯವಾಗಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸಾಧ್ಯವಾದಷ್ಟು ತ್ವರಿತವಾಗಿ ಸ್ಪಂದಿಸಬೇಕು. ಪ್ರಜಾಸೇವಾ ಆಂದೋಲನ ನಡೆಯುವ ದಿನದಂದು ಸಂಬಂಧಪಟ್ಟ ಇಲಾಖೆಗಳು ಯಾವುದೇ ಇತರ ಸಭೆಗಳನ್ನು ನಿಗದಿಪಡಿಸಬಾರದು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿ.ಪಂ. ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.
About the Author
suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

