}

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ವಿರುದ್ಧ ಎಸ್‌ಡಿಪಿಐ ‘ಡಿಸಿ ಕಚೇರಿ ಚಲೋ’

suddilive.com
By -
0




ಬಂಟ್ವಾಳ: ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಟೋಲ್ ಗೇಟ್‌ನ್ನು ಕೂಡಲೇ ಮುಚ್ಚಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳವಾರ ‘ಡಿಸಿ ಕಚೇರಿ ಚಲೋ’ ಪಾದಯಾತ್ರೆ ನಡೆಸಿತು.


ಬ್ರಹ್ಮರಕೂಟ್ಲು ಟೋಲ್ ಗೇಟ್‌ನಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಟೋಲ್ ವಸೂಲಿಗೆ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ ಅವರು ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರಿಗೆ ಪಂಜು ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.


ಈ ವೇಳೆ ಮಾತನಾಡಿದ ರಿಯಾಝ್ ಫರಂಗಿಪೇಟೆ, ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದ್ದು, ಇದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕುತ್ತಿರುವ ಟೋಲ್ ವ್ಯವಸ್ಥೆಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ ಅವರು, ಬೇಡಿಕೆ ಈಡೇರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.


ಜಿಲ್ಲಾಧಿಕಾರಿ ಕಚೇರಿಯಿಂದ ಮತ್ತೆ ಬ್ರಹ್ಮರಕೂಟ್ಲಿಗೆ ತೆರಳಿ ನಾಗರಿಕರನ್ನು ಒಗ್ಗೂಡಿಸಿ ಟೋಲ್ ಗೇಟ್ ತೆರವುಗೊಳಿಸುವ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.


ಎಸ್‌ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಮಾತನಾಡಿ, ಟೋಲ್ ಗೇಟ್ ಕಾರ್ಮಿಕರು ಹಾಗೂ ಸಾರ್ವಜನಿಕರ ಬದುಕಿಗೆ ಹೊರೆಯಾಗಿದ್ದು, ಅದನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು. ಎಸ್‌ಡಿಟಿಯು ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ಟೋಲ್ ಗೇಟ್ ತೆರವಾಗುವವರೆಗೆ ಹೋರಾಟ ಮುಂದುವರಿಯಲಿದೆ. ಜನರ ಪರವಾಗಿ ಲೋಕಸಭಾ ಸದಸ್ಯರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.


ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ನಡೆಯುತ್ತಿರುವ ವಸೂಲಿಯನ್ನು ಖಂಡಿಸಿದರು. ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಮೂಲಕ ತಡೆದ ಹಿನ್ನೆಲೆಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು.


ಶಾಂತಿಯುತವಾಗಿ ಮನವಿ ಸಲ್ಲಿಸಲು ಬಂದಿರುವ ಪ್ರತಿಭಟನಾಕಾರರಿಂದ ಜಿಲ್ಲಾಧಿಕಾರಿಯೇ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಒತ್ತಾಯಿಸಿದ ರಿಯಾಝ್ ಕಡಂಬು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೆದ್ದಾರಿ ಸ್ತಬ್ಧಗೊಳಿಸುವ ಮೂಲಕ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.


ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ ಮಾತನಾಡಿ, ಬ್ರಹ್ಮರಕೂಟ್ಲು ಟೋಲ್ ಗೇಟ್ ಸಂಪೂರ್ಣವಾಗಿ ತೆರವಾಗುವವರೆಗೆ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.


ಈ ನಡುವೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು ಜಿಲ್ಲಾಧಿಕಾರಿಯವರ ಪರವಾಗಿ ಮನವಿ ಸ್ವೀಕರಿಸಲು ಆಗಮಿಸಿದ್ದ ಅಧಿಕಾರಿಗಳ ಮುಂದೆ ಪಕ್ಷದ ಬೇಡಿಕೆಗಳನ್ನು ಮಂಡಿಸಿ ಮನವಿ ಪತ್ರವನ್ನು ಹಸ್ತಾಂತರಿಸಿದರು.


ಪಾದಯಾತ್ರೆಯಲ್ಲಿ ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು, ಯಂಗ್ ಡೆಮಾಕ್ರಟ್ಸ್ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಶ್ ಅಲಿ, ಎಸ್‌ಡಿಟಿಯು ಗ್ರಾಮಾಂತರ ಜಿಲ್ಲಾಧ್ಯಕ್ಷ ಪಿಲಿಪ್ ಹೆನ್ರಿ ಡಿ ಸೋಜ, ಎಸ್‌ಡಿಟಿಯು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ರಹಿಮಾನ್ ಬೋಳಿಯಾರ್, ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಳಕೆಮಜಲು, ನವಾಝ್ ಕಟ್ಟೆ, ಎಸ್‌ಡಿಪಿಐ ನಗರ ಉಪಾಧ್ಯಕ್ಷ ಅಝೀಝ್ ಸುರತ್ಕಲ್, ನಗರ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಯಾಸಿನ್ ಅರ್ಕುಳ ಸೇರಿದಂತೆ ವಿವಿಧ ಅಸೆಂಬ್ಲಿ ನಾಯಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default